ಬಾಗಲಕೋಟೆ: ಸಂವಿಧಾನ ದೃಷ್ಠಿಯಲ್ಲಿ ಹೆಣ್ಣು-ಗಂಡು ಎಂಬ ಭೇದಭಾವವಿಲ್ಲ. ಎಲ್ಲರೂ ಸಮಾನರೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಹೇಳಿದರು.
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಶಿಶು ಅಭಿವೃದ್ದಿ ಯೋಜನೆ, ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನದಡಿಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಿಳಾ ದೌರ್ಜನ್ಯ ತಡೆಗೆ ಸಾಕಷ್ಟು ಕಾನೂನುಗಳನ್ನು ನಮ್ಮ ಸಂವಿಧಾನದಲ್ಲಿ ರೂಪಿಸಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಮಾತನಾಡಿ ಸಂವಿಧಾನ ದೃಷ್ಠಿಯಲ್ಲಿ ಗಂಡು-ಹೆಣ್ಣು ಎಂಬ ಭೇದಭಾವವಿಲ್ಲ. ಪುರುಷರಷ್ಟೇ ಮಹಿಳೆಯ ಸಮಾನರಾಗಿದ್ದು, ಮಹಿಳೆಯರು ಆರ್ಥಿಕ, ಸಾಮಾಜಿಕ ದೃಷ್ಠಿಯಿಂದ ಅಭಿವೃದ್ದಿ ಸಾಧಿಸಿ ದೇಶದಕ್ಕೆ ನಮ್ಮದೇಯಾದ ಕೊಡುಗೆ ನೀಡಬೇಕು. ಸರಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದೆಂದು ತಿಳಿಸಿದರು.
ಅತಿಥಿ ಉಪನ್ಯಾಸ ನೀಡಿದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಅವರು ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಬಾಲ್ಯವಿವಾಹ ಕುರಿತು ಶಾಲಾ ಮಕ್ಕಳೊಂದಿಗೆ ಸಂಭಾಷಣೆ ನಡೆಸಿ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿಕೊಟ್ಟರು. ಸಂವಿಧಾನ ಬದ್ದರಾಗಿ ನಾವೆಲ್ಲರೂ ನಡೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಎ.ಕೆ.ಬಸಣ್ಣವರ ಮಾತನಾಡಿ ಮಹಿಳಾ ದಿನಾಚರಣೆ ತನ್ನದೇಯಾದ ವಿಶೇಷ ಸ್ಥಾನ ಹೊಂದಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವುದನ್ನು ನಾವು ಕಾಣುತ್ತಿದ್ದೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಉಪ ಪ್ರಾಚಾರ್ಯ ಎಂ.ಬಿ.ದೊಡ್ಡಪ್ಪನವರ ವೇದಿಕೆ ಮೇಲೆ ಇದ್ದರು. ವೀಣಾ ಪಟ್ಟಣಶೆಟ್ಟಿ ವಂದಿಸಿದರು. ರಾಜಮನಿ ಕುಲಕರ್ಣಿ ನಿರೂಪಿಸಿದರು.
Be the first to comment