ಜಿಲ್ಲಾ ಸುದ್ದಿಗಳು
ಬೆಳಗಾವಿ:
ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಂಧಿಸಿದಂತೆ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ(ಮೇ 12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು ಲಸಿಕೆಯ ನಿರೀಕ್ಷೆಯಲ್ಲಿದ್ದಾರೆ. ಆದ್ದರಿಂದ ಲಸಿಕೆ ಸರಬರಾಜು ಆದ ಕೂಡಲೇ ಅವರಿಗೆ ಲಸಿಕೆ ನೀಡಬೇಕು.
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿ ತಾಲ್ಲೂಕಿನಲ್ಲಿ ಮಾದರಿ ತಪಾಸಣಾ ಪ್ರಮಾಣ ಹೆಚ್ಚಿಸುವ ಮೂಲಕ ಸೋಂಕಿತರನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಅಥವಾ ಹೋಮ್ ಐಸೋಲೇಷನ್ ಗೆ ಕ್ರಮಗಳನ್ನು ಕೈಗೊಳ್ಳಬೇಕು.
ಸೋಂಕಿತರ ಆರೋಗ್ಯದ ಮೇಲೆ ನಿಗಾ ಇರಲಿ:
ಲಕ್ಷಣರಹಿತ ಸೋಂಕಿತರನ್ನು ತಾಲ್ಲೂಕುಗಳಲ್ಲಿರುವ ಕೋವಿಡ್ ಕೇರ್ ಕೇಂದ್ರಗಳು ಹಾಗೂ ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗುತ್ತಿದೆ. ಈ ರೀತಿಯ ಐಸೋಲೇಷನ್ ನಲ್ಲಿ ಇರುವಂತಹ ಸೋಂಕಿತರ ಆರೋಗ್ಯದ ಮೇಲೆ ಪ್ರತಿದಿನ ನಿಗಾವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಶ್ರೀ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.
ಮನೆಯಲ್ಲಿಯೇ ಇರುವ ಲಕ್ಷಣರಹಿತ ಸೋಂಕಿತರಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ಉಚಿತವಾಗಿ ಔಷಧ ಕಿಟ್ ನೀಡಬೇಕು. ಆರೋಗ್ಯ ಇಲಾಖೆಯ ತಂಡಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿದಿನ ಅವರ ಆರೋಗ್ಯದ ಕುರಿತು ಮಾಹಿತಿಯನ್ನು ಪಡೆದುಕೊಳ್ಳಬೇಕು.ತುರ್ತು ಚಿಕಿತ್ಸೆಯ ಅಗತ್ಯವಿರುವವರನ್ನು ಸಕಾಲಕ್ಕೆ ಆಸ್ಪತ್ರೆಗೆ ಕಳುಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಚನ್ನಮ್ಮನ ಕಿತ್ತೂರು ಶಾಸಕ ಶ್ರೀ ಮಹಾಂತೇಶ ದೊಡಗೌಡ್ರ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಜಿಲ್ಲೆಯ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗಾಗಿ ಕೈಗೊಳ್ಳಲಾಗಿರುವ ಕ್ರಮಗಳನ್ನು ವಿವರಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಕೋವಿಡ್ ವಾರ್ ರೂಮ್ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು, ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಸಿಬ್ಬಂದಿಗೆ ಸೂಚನೆ ನೀಡಿದರು.
ಇದಾದ ಬಳಿಕ ಬೈಲಹೊಂಗಲ ತಾಲ್ಲೂಕಿಗೆ ಭೇಟಿ ನೀಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.
Be the first to comment