ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಸಿದ್ದತೆ : ಡಿಸಿ ರಾಜೇಂದ್ರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಬಾಗಲಕೋಟೆ :ಮುಂದಿನ ದಿನಗಳಲ್ಲಿ ಸಂಭವಿಸುವ ಕೋವಿಡ್ 3ನೇ ಅಲೆಯಿಂದ ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುವ ಸಾಧ್ಯತೆ ಇದ್ದು, ಚಿಕಿತ್ಸೆಗಾಗಿ ಬೇಕಾಗುವ ಎಲ್ಲ ರೀತಿಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ಅಧಿಕಾರಿಗಳು ಹಾಗೂ ಸರಕಾರಿ ಮತ್ತು ಖಾಸಗಿ ವೈದ್ಯರ ಜೊತೆ ವಿಡಿಯೋ ಸಂವಾದದ ಮೂಲಕ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ 3ನೇ ಅಲೆಯಲ್ಲಿ ಹೆಚ್ಚಾಗಿ 18 ವರ್ಷದೊಳಗಿನ ಮಕ್ಕಳ ಮೇಲೆ ಪರಿಣಾಮ ಭೀರಲಿದ್ದು, ಚಿಕಿತ್ಸೆಗೆ ಬೇಕಾಗುವ ವೈದ್ಯಕೀಯ ಉಪಕರಣಗಳನ್ನು ಸಜ್ಜುಗೊಳಿಸಬೇಕು. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕ್ಕ ಮಕ್ಕಳ ಚಿಕಿತ್ಸೆಗೆ ಇರುವ ವಿವಿಧ ತರಹರ ಬೆಡ್, ವೈದ್ಯಕೀಯ ಉಪಕರಣ, ತಜ್ಞ ವೈದ್ಯರ ಮಾಹಿತಿಯನ್ನು ಒದಗಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಆಯಾ ತಾಲೂಕಿನ ಮಕ್ಕಳಿಗೆ ಚಿಕಿತ್ಸೆಗೆ ಮಕ್ಕಳ ತಜ್ಞರು, ತಮ್ಮಲ್ಲಿರುವ ವೈದ್ಯಕೀಯ ಉಪಕರಣಗಳ ಬಗ್ಗೆ ಮಾಹಿತಿ ನೀಡಬೇಕು. ಚಿಕಿತ್ಸೆಗೆ ಆಗತ್ಯವಿರುವ ವೈದ್ಯಕೀಯ ಉಪಕರಣಗಳ ಬೇಡಿಕೆ ಪಟ್ಟಿಯನ್ನು ತಾಲೂಕಿನ ವೈದ್ಯಾಧಿಕಾರಿಗಳ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು. ಅವುಗಳ ಪೂರೈಕೆಗೆ ಕ್ರಮವಹಿಸಲಾಗುವುದು. ನಾರಮಲ್ ಕೇಸ್‍ಗಳು ಇದ್ದಲ್ಲಿ ತಾಲೂಕಾ ಹಂತದಲ್ಲಿಯೇ ಚಿಕಿತ್ಸೆಗೆ ಸಿದ್ದತೆ ಮಾಡಿಕೊಳ್ಳಬೇಕು. ಸಿರಿಯಸ್ ಕಂಡಿಷನ್‍ಗಳಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಕ್ರಮವಹಿಸಲಾಗುವುದೆಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ ಖಾಸಗಿ ಆಸ್ಪತ್ರೆಯ ವೈದ್ಯರು ಮಕ್ಕಳ ಚಿಕಿತ್ಸೆಗಾಗಿ ಲಭ್ಯವಿರುವ ಸೌಲಭ್ಯ ಹಾಗೂ ವೆಂಟಿಲೇಟರ್ ಸೇರಿದಂತೆ ಇತರೆ ಉಪಕರಣಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು. ಎರಡನೇ ಅಲೆಯಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದೀರಿ ಮುಂದೆಯು ಸಹ ಇದೇ ರೀತಿ ಕಾರ್ಯನಿರ್ವಹಿಸಲು ತಿಳಿಸಿದರು. ಕೋವಿಡ್ ಲಸಿಕಾರಣ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ತಾಯಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ಖಾಸಗಿ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*