ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಳಿಗೆ ಕರೆ ನೀಡಿದರು.
ಗುರುವಾರ ಅಮೀನಗಡ ಪಟ್ಟಣದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಲಸಿಕೆ ಪಡೆಯುವದರಿಂದಾಗುವ ಪ್ರಯೋಜನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಲಸಿಕೆ ಪಡೆಯುವಂತೆ ಮಾಡಬೇಕು. ಲಸಿಕೆಯಿಂದ ಯಾರು ವಂಚಿತರಾಗದಂತೆ ನಿಗಾವಹಿಸಬೇಕು. ಜೂನ್ 21 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಬೇಕು. ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಕೊರೊನಾ ನಿಯಂತ್ರಿಸುವಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿದಿಗಳ ಪಾತ್ರ ಮುಖ್ಯವಾಗಿದೆ ಎಂದು ತಿಳಿಸಿದರು.
ನಂತರ ಹುನಗುಂದ ತಾಲೂಕಿನ ಕೆಲೂರ, ಗುಡೂರ, ನಾಗೂರ ಗ್ರಾಮಗಳಿಗೆ ಭೇಟಿ ನೀಡಿದ ಕಳಸದ ಅವರು ನರೇಗಾ ಯೋಜನೆಯಡಿ ಜಲಶಕ್ತಿ ಅಭಿಯಾನದಡಿ ಪ್ರಾರಂಭವಾಗಿರುವ ಕಂದಕ ಬದು ಕಾಮಗಾರಿ ಹಾಗೂ ರಸ್ತೆಬದಿ ನಡೆತೋಪು ಕಾಮಗಾರಿಗಳನ್ನು ಪರಿಶೀಲಿಸಿದರು. ಕೂಲಿ ಕಾರ್ಮಿಕರನ್ನು ಯೋಗಕ್ಷೇಮ ವಿಚಾರಿಸಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವಂತೆ ಕೂಲಿ ಕಾರ್ಮಿಕರಿಗೆ ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹುನಗುಂದದಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಉಸ್ತುವಾರಿ ಕಾರ್ಯದರ್ಶಿಗಳು ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ತಪಾಸಣೆ, ಔಷಧಿ ಹಾಗೂ ಊಟದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಕೂಡಲಸಂಗಮಕ್ಕೆ ಭೇಟಿ ನೀಡಿದರು. ಬೊಮ್ಮನಗಿ ಆರ್.ಸಿ ಸೆಂಟರಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿ ಸಂದರ್ಭದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಬಿ.ಕೊಂಗವಾಡ, ತಹಶೀಲ್ದಾರ ಶ್ವೇತಾ ಬಿಡಿಕರ, ಹುನಗುಂದ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಿ.ಬಿ.ಮ್ಯಾಗೇರಿ ಸೇರಿದಂತೆ ಇತರರು ಇದ್ದರು.
Be the first to comment