75ನೇ ಸ್ವಾತಂತ್ರೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ದತೆ:ಸಿಎಂ ಚಿನ್ನದ ಪದಕ ಪಡೆದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಸನ್ಮಾನ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಜಿಲ್ಲೆಯಲ್ಲಿ ಆಗಸ್ಟ 15 ರಂದು ಜರುಗಲಿರುವ 75ನೇ ಸ್ವಾತಂತ್ರೋತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ರೀತಿಯ ಸಿದ್ದತೆಗೆ ಸೂಚಿಸಲಾಗಿದ್ದು, ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಜಿಲ್ಲೆಯ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಗುತ್ತಿದೆ ಎಂದು ಜಿ.ಪಂ ಸಿಇಓ ಟಿ.ಭೂಬಾಲನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಆಗಸ್ಟ 15 ರಂದು ಬೆಳಿಗ್ಗೆ 8.30 ಗಂಟೆಗೆ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗುವ ಧ್ವಜಾರೋಜಹಣ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ದತೆ ಕೈಗೊಳ್ಳಲು ಸೂಚಿಸಿದರು.

ಈ ಬಾರಿ 75ನೇ ಸ್ವಾತಂತ್ರೋತ್ಸವ ಆಗಿರುವದರಿಂದ ವಿಶೇಷವಾಗಿ ಆಚರಿಸಬೇಕಿದ್ದು, ಪೋಲಿಸ್, ಗೃಹರಕ್ಷಕದಳ, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಾಜಿ ಸೈನಿಕರ ತಂಡ ಒಳಗೊಂಡಂತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಿಸಬೇಕು. ಅಲ್ಲದೇ ಇತ್ತೀಚೆಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲು ತಿಳಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಿದರೆ, ಬಂದೂಬಸ್ತಿ ವ್ಯವಸ್ಥೆಗೆ ಪೋಲಿಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣ ಸ್ವಚ್ಛತೆಗೆ ನಗರಸಭೆಗೆ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾವಾಗಿ ಧರಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಮಕ್ಕಳು ಭಾಗವಹಿಸುವಂತಿಲ್ಲ. ಕಾರ್ಯಕ್ರಮದಂದು ಸ್ಯಾನಿಟೈಜರ್ ವಿತರಣೆ, ಸಿಂಪಡಣೆ ವ್ಯವಸ್ಥೆ ಮಾಡಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟ್ಯಾಜರ್ ವ್ಯವಸ್ಥೆ ಮಾಡಲು ತಿಳಿಸಿದರು. ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಹೇಮಾವತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಗೃಹರಕ್ಷಕದಳ, ಭಾರತ ಸೇವಾದಳ ಹಾಗೂ ಕಂದಾಯ ಇಲಾಖೆಯ ವಿಷಯ ನಿರ್ವಾಹಕರಾದ ಕಸುಂದೆ, ಮಂಜುನಾಥ ಬಂಡರಗಲ್ಲ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*