ರಾಜ್ಯ ಸುದ್ದಿಗಳು
ದೇವನಹಳ್ಳಿ
ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದಲ್ಲಿದ್ದಾಗಲೇ ಪಕ್ಷವನ್ನು ತೊರೆದು ಕಮಲ ಪಾಳೆಗೆ ಸೇರಿದ ಎಂಟಿಬಿ ನಾಗರಾಜ್‌ಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಸಚಿವ ಸಂಪುಟದಲ್ಲಿ ಜಿಲ್ಲೆಯ ಜನರ ನಿರೀಕ್ಷೆಯಂತೆ ಸ್ಥಾನ ಪಡೆಯಲು ಕಾತುರದಲ್ಲಿದಂತೆ, ಅವರಿಗೆ ಸಚಿವ ಸ್ಥಾನ ದೊರೆತಿದೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಪೌರಾಡಳಿತ ಮತ್ತು ಸಕ್ಕರೆ ಸಚಿವರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ರಾಜೀನಾಮೆಯಿಂದ ಸರಕಾರದಲ್ಲಿದ್ದ ಎಲ್ಲಾ ಸಚಿವರನ್ನು ವಿಸರ್ಜಿಸಲಾಗಿತ್ತು. ಹೊಸಕೋಟೆ ತಾಲೂಕಿನಲ್ಲಿ ಎಂಟಿಬಿ ನಾಗರಾಜು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾಗಲೇ ಅವರ ಬೆಂಬಲಿಗರು ಮತ್ತು ಅಭಿಮಾನಿ ಬಳಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಸಚಿವ ಎಂಟಿಬಿ ನಾಗರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿರುವುದು ಸಂತಸದ ವಿಚಾರವಾಗಿದೆ. ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ. ರಾಜ್ಯದ ಅಭಿವೃದ್ಧಿಯನ್ನು ಮನದಲ್ಲಿಟ್ಟುಕೊಂಡು ಶ್ರಮಿಸಲಾಗುವುದು. ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಚುರುಕಾಗಿ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಿಂದ ಎರಡನೇ ಬಾರಿಗೆ ಎಂಟಿಬಿ ನಾಗರಾಜು ಸಚಿವರಾಗಿರುವುದು ಜಿಲ್ಲೆಯ ಜನರಿಗೆ ಖುಷಿ ತಂದಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಕಾರ್ಯಕ್ರಮ ರೂಪಿಸಿ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಎಂಟಿಬಿ ನಾಗರಾಜ್ ಅವರಿಗೆ ಜಿಲ್ಲೆಯು ಹೊಸದೇನಲ್ಲ. ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಥಕ್ಕೆ ಕೊಂಡೈಯುತ್ತಾರೆಂಬ ನಂಬಿಕೆ ಇದೆ ಎಂದರು.
ಈ ವೇಳೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಎ.ಕೆ.ಪಿ.ನಾಗೇಶ್, ತಾಲೂಕು ಅಧ್ಯಕ್ಷ ಸುಂದರೇಶ್, ಜಿಲ್ಲಾ ಅಸಂಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ಎಲ್.ಎನ್.ಅಂಬರೀಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರವಿಕುಮಾರ್, ಸೈನಿಕ ಪ್ರಕೋಷ್ಠದ ಸಂಚಾಲಕ ವೆಂಕಟೇಶ್, ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್‌ಬಾಬು, ಎಸ್‌ಟಿ ಮೋರ್ಚಾ ಅಧ್ಯಕ್ಷ ಅಮರನಾಥ್, ಬಿಜೆಪಿ ಯುವ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು.
Be the first to comment