ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ, ಮೆರವಣಿಗೆ ನಿರ್ಬಂಧ : ಡಿಸಿ ರಾಜೇಂದ್ರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಬರುವ ಸೆಪ್ಟೆಂಬರ ಮಾಹೆಯಲ್ಲಿ ಆಚರಿಸಲ್ಪಡುವ ಗಣೇಶ ಚತುರ್ಥಿ ಹಬ್ಬದಲ್ಲಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಮಾಡುವುದನ್ನು ಕೋವಿಡ್ ಹಿನ್ನಲೆಯಲ್ಲಿ ಸರಕಾರ ನಿರ್ಬಂಧಿಸಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ಹಿನ್ನಲೆಯಲ್ಲಿ ಸರಕಾರ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡುವುದನ್ನು ನಿರ್ಬಂಧಿಸಿದೆ. ಸರಕಾರ ಹೊರಡಿಸಿದ ಮಾರ್ಗಸೂಚಿಗಳು ನೂರಕ್ಕೆ ನೂರರಷ್ಟು ಕಡ್ಡಾಯವಾಗಿ ಪಾಲನೆಯಾಗಬೇಕು. ಈ ಕಾರ್ಯಕ್ಕೆ ಗಣೇಶ ಮಂಡಳಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಗಣೇಶ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಇಲ್ಲವೇ ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಪೆಂಡಾಲ್ ಹಾಕಿ ವೇದಿಕೆ ನಿರ್ಮಿಸಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜಿಸುವ ಸಮಯದಲ್ಲಿ ಮೆರವಣಿಗೆ ಹಾಗೂ ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲವೆಂದು ತಿಳಿಸಿದರು.

ಪಾರಂಪರಿಕ ಗಣೇಶ ಮೂರ್ತಿಯನ್ನು ಪೂಜಿಸುವವರು ಮನೆಯಲ್ಲಿಯೇ ವಿಸರ್ಜಿಸಬೇಕು. ಇಲ್ಲವೇ ಅತೀ ಸಮೀಪವಾಗುವಂತ ಮಾರ್ಗಗಳನ್ನು ಅನುಸರಿಸಿ ನಗರಸಭೆ, ಜಿಲ್ಲಾಡಳಿತ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸೂಚಿಸಿದ ಹೊಂಡ, ಕಲ್ಯಾಣಿ ಇಲ್ಲವೇ ಮೊಬೈಲ್ ಟ್ಯಾಂಕರ್‍ಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸತಕ್ಕದ್ದು, ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನಂಪ್ರತಿ ಸ್ಯಾನಿಟೈಸೇಷನ್ ಮಾಡತಕ್ಕದ್ದು. ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ಮಾಸ್ಕ, ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿದೆ ಎಂದು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಜಿಲ್ಲಾಡಳಿತ ಹೊರಡಿಸಿದ ಮಾರ್ಗಸೂಚಿಗಳನ್ನು ಸಹ ಪಾಲನೆ ಮಾಡತಕ್ಕದ್ದು. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗಬಾರದಂತೆ ಹಬ್ಬಗಳನ್ನು ಆಚರುವಂತೆ ತಿಳಿಸಿದರು. ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು ಬದಲಾವಣೆಗಳಾದಲ್ಲಿ ಅದಕ್ಕೆ ಬದ್ದರಾಗುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಡಿವೈಎಸ್‍ಪಿ ನಂದರೆಡ್ಡಿ ಸೇರಿದಂತೆ ಗಣೇಶ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*