ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡ ಕಾರ್ಮಿಕ ಅದಾಲತ್ ಕಾರ್ಯಕ್ರಮದ ಜಾಗೃತಿ ವಾಹನಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಶನಿವಾರ ಚಾಲನೆ ನೀಡಿದರು.
ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಾರ್ಮಿಕ ಅದಾಲತ್‍ಗೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹಾಗೂ ಕಾರ್ಮಿಕ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಈ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ 6 ರಿಂದ 16 ವರೆಗೆ ಕಾರ್ಮಿಕ ಇಲಾಖೆಗೆ ಸಂಬಂಧಿಸಿದ ಬಾಕಿ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದ್ದು, ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಡಿ.ಜಾದವ ಮಾತನಾಡಿ ಕಾರ್ಮಿಕರ ಸಮಸ್ಯೆ ಪರಿಹರಿಸುವುದು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾರಧನಕ್ಕಾಗಿ ಸಲ್ಲಿಸಿದ ಅರ್ಜಿ ಶೀಘ್ರದಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ 6 ರಿಂದ 16 ವರೆಗೆ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆವರೆಗೆ ಕಾರ್ಮಿಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment