ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳ ಪ್ರವೇಶಾತಿಗಾಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ 16 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಕುರಿತು ಜರುಗಿದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರವೇಶ ಪರೀಕ್ಷೆಗೆ ಜಿಲ್ಲೆಯಾದ್ಯಂತ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 9528 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 1152, ಜಮಖಂಡಿ 984, ಬಾದಾಮಿ 1512, ಮುಧೋಳ 2088, ಬೀಳಗಿ 1512, ಹುನಗುಂದ 624, ಇಲಕಲ್ಲ 672 ಹಾಗೂ ಬನಹಟ್ಟಿಯಲ್ಲಿ 984 ವಿದ್ಯಾರ್ಥಿಗಳಿದ್ದಾರೆಂದು ತಿಳಿಸಿದರು.
ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ವೀಕ್ಷಕರನ್ನು ನೇಮಿಸಲಾಗಿದ್ದು, ಪರೀಕ್ಷೆಯ ಮೇಲ್ವಿಚಾರಣೆ ಮಾಡಲಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ನಿಟ್ಟಿನಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸರಕಾರಿ ಕಾಲೇಜುಗಳ ಪ್ರಾಚಾರ್ಯರನ್ನೊಳಗೊಂಡ 6 ತಂಡಗಳನ್ನು ನೇಮಿಸಲಾಗಿದ್ದು, ಸದರಿ ತಂಡವು ಪ್ರಥಮ ಮತ್ತು ದ್ವಿತೀಯ ಅಧಿವೇಶನ ಪರೀಕ್ಷೆಗೆ ಅನುಗುಣವಾಗಿ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ತಲುಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳು ಹಾಗೂ ಓಎಂಆರ್ ಉತ್ತರ ಪತ್ರಿಕೆಗಳು ಪರೀಕ್ಷಾ ಕೊಠಡಿಯಿಂದ ಬಿಟ್ಟು ಹೊರಗೆ ಹೋದರೆ ಅದಕ್ಕೆ ಪ್ರಶ್ನೆ ಪತ್ರಿಕೆ ಪಾಲಕರೇ ನೇರ ಹೊಣೆಗಾರರಾಗುತ್ತಿದ್ದು, ಪರೀಕ್ಷೆಯ ಪ್ರತಿಯೊಂದು ಅವಧಿಯಲ್ಲಿಯೂ ಪ್ರಶ್ನೆ ಪತ್ರಿಕೆ ಪಾಲಕರು ಪರೀಕ್ಷಾ ಕೊಠಡಿಯ ಮೇಲ್ವಿಚಾರಣೆ ಮಾಡಬೇಕು. ಪರೀಕ್ಷಾ ಮುಗಿದ ತಕ್ಷಣ ಉಪ ಮುಖ್ಯ ಅಧೀಕ್ಷಕರಿಗೆ ಕೊಠಡಿ ಮೇಲ್ವಿಚಾರಕರು ಒಪ್ಪಿಸುವ ಉಪಯೋಗಿಸಿದ ಮತ್ತು ಉಪಯೋಗಿಸದ ಓಎಂಆರ್ ಉತ್ತರ ಪತ್ರಿಕೆ, ಉಳಿದ ಪ್ರಶ್ನೆ ಪತ್ರಿಕೆಗಳನ್ನು ಪರಿಶೀಲಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಸ್ಥಾಪಿಸಲಾದ 23 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಹಾಗೂ ಪ್ರಶ್ನೆ ಪತ್ರಿಕಾ ಸಾಗಾಣಿಕಾ ತಂಡಕ್ಕೆ ಸೂಕ್ತ ಎಸ್ಕಾರ್ಟ ಒದಗಿಸಲು ಪೊಲೀಸ್ ಇಲಾಖೆಗೆ ತಿಳಿಸಿದರು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದ್ದು, ಸುತ್ತ ಮುತ್ತಲು ಇರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ತಿಳಿಸಿದರು. ಜಿಲ್ಲಾ ಖಜಾನೆ ಅಧಿಕಾರಿಗಳು ಪರೀಕ್ಷಾ ಗೌಪ್ಯ ವಸ್ತುಗಳ ಹಸ್ತಾಂತರ ಹಾಗೂ ತಮ್ಮ ಅಧೀನದಲ್ಲಿ ಬರುವ ಉಪ ಖಜಾನಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಕೇಂದ್ರದ ಮುಂದೆ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪಿಸಿ, ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಿ, ತುರ್ತು ಕಾರ್ಯಕ್ಕಾಗಿ ಜಿಲ್ಲಾ ಮತ್ತು ತಾಲೂಕಾ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ಸಿದ್ದತೆಯಲ್ಲಿ ಇಟ್ಟುಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು. ಪರೀಕ್ಷಾ ಮುನ್ನ ಮತ್ತು ಪರೀಕ್ಷಾ ದಿನಗಳಂದು ಪರೀಕ್ಷಾ ಕೊಠಡಿಗಳನ್ನು ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ಯಾನಿಟೈಜರ್ ಮಾಡಲು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ ಪರೀಕ್ಷಾ ಸಿದ್ದತೆ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ, ಕೃಷಿ ಉಪನಿರ್ದೇಶಕ ಎನ್.ಎಂ.ಕೊಂಗವಾಡ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಪ್ರಶಾಂತ ಗಿಡದಾನಪ್ಪಗೋಳ ಸೇರಿದಂತೆ ಪರೀಕ್ಷಾ ವೀಕ್ಷಕರು, ಮುಖ್ಯ ಅಧೀಕ್ಷಕರು, ತಹಶೀಲ್ದಾರರು ಉಪಸ್ಥಿತರಿದ್ದರು.
Be the first to comment