ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಸರ್ವರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕಾನೂನು ಅರಿವು-ನೆರವು ವಿಶೇಷ ಅಭಿಯಾನದ ಪ್ರಚಾರ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ದೇಶಪಾಂಡೆ ಗೋವಿಂದರಾಜ ಶಂಕರ ಚಾಲನೆ ನೀಡಿದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ವಿಶೇಷ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಅಭಿಯಾನದ ಮೂಲಕ ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಸ್ಕೋ ಕಾಯ್ದೆ, ಮಕ್ಕಳ ಸಹಾಯವಾಣಿ, ದತ್ತು ಪ್ರಕ್ರಿಯೆ, ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಅಭಿಯಾನದ ಯಶಸ್ವಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಮಾತನಾಡಿ ಸರ್ವರಿಗೂ ನ್ಯಾಯ ಒದಗಿಸುವ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಪ್ರಚಾರ ವಾಹನದ ಮೂಲಕ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ ಸಿ.ಬಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಕಲ್ಪನಾ ಎಂ.ಎಸ್, 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಪಲ್ಲವಿ ಆರ್., 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ದ್ಯಾವಪ್ಪ ಎಸ್.ಬಿ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ನಾಗರಾಜ ಎಸ್, ವಕೀಲರ ಸಂಘದ ಅಧ್ಯಕ್ಷ ವಿ.ಬಿ.ಚೌಕಿಮಠ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment