ರಾಜ್ಯ ಸುದ್ದಿಗಳು
ಬೆಂಗಳೂರು:
ಬೆಂಗಳೂರಿನಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007 ರಲ್ಲಿ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿತ್ತು. ಆ ಬಳಿಕ ಈತ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಈತನ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ಹೊರಡಿಸಿದೆ.
ಉಮೇಶ್ ರೆಡ್ಡಿ ಫೆಬ್ರವರಿ 28, 1998 ರಲ್ಲಿ ಬೆಂಗಳೂರಿನ ಯಶವಂತಪುರದ ಮರಡಿ ಸುಬ್ಬಯ್ಯ ಎಂಬುವವರ ಪತ್ನಿ ಜಯಶ್ರೀ ಅವರ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ. ಈ ಸಂಬಂಧ 1998ರ ಮಾರ್ಚ್ 2 ರಂದು ಉಮೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದರು. 2007 ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆತ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಉಮೇಶ್ ರೆಡ್ಡಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬಳಿಕ ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದ. ಸುಪ್ರೀಂ ಕೋರ್ಟ್ ಸಹ ಈತನ ಅರ್ಜಿಯನ್ನು ವಜಾಗೊಳಿಸಿತ್ತು. 2013 ರಲ್ಲಿ ಈತನ ತಾಯಿ ಗೌರಮ್ಮ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು.
ಬಳಿಕ ಮತ್ತೊಮ್ಮೆ ಈತ ಸುಪ್ರೀಂ ಕೋರ್ಟ್ ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದ. 2016 ರಲ್ಲಿ ಮರುಪರಿಶೀಲನಾ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆ ಬಳಿಕ ಆತ 2016 ರಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿದ್ದು, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
Be the first to comment