ರಾಜ್ಯ ಸುದ್ದಿಗಳು
ಬೆಂಗಳೂರು
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 27,ಕ್ರಿಯಾ ಯೋಜನೆಯಲ್ಲಿ ಇರುವಂತೆ ಇಲಾಖೆವಾರು ಯೋಜನೆಗಳ ಕುರಿತು ಮಾಹಿತಿ ಪಡೆದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಸೆಪ್ಟೆಂಬರ್-2021 ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಯೋಜನೆಗಳ ಬಗ್ಗೆ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ರವಾನಿಸಿ, ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು. ತೋಟಗಾರಿಕೆ ಇಲಾಖೆಯ ಬಿಲ್ ಬಾಕಿಯಿದ್ದು, ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಪ್ರಾರಂಭಿಸಬೇಕು ಎಂದರಲ್ಲದೇ, ರೇಷ್ಮೆ ಹುಳು ಸಾಕಾಣಿಕಾ ಮನೆಗೆ ಸಹಾಯಧನ ನೀಡಬೇಕು ಹಾಗೂ ಪಶುಸಂಗೋಪನೆ ಇಲಾಖೆಯಿಂದ 15 ರಿಂದ 18 ಸಾವಿರ ಮೊತ್ತದ ಮಿಲ್ಕ್ ಮಿಷನ್ ನೀಡಲಾಗುತ್ತಿದ್ದು, ರಾಸುಗಳಿಗೆ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಎರಡು ಕೌ ಮ್ಯಾಟ್ಸ್ (ರಬ್ಬರ್ ಮ್ಯಾಟ್ಸ್) ನೀಡಲು ಬಾಕಿ ಇರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಿಳಿಸಿದರು.
ಐದು ಎಕರೆ ಜಮೀನು ಹೊಂದಿರುವ ರೈತರಿಗೆ ಸಕಾಲ ಯೋಜನೆಯಡಿ ಶೇ. 90℅ ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಬಲೆ,ಹರಿಗೋಲಿನ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.ಸರಳ ವಿವಾಹಕ್ಕೆ ಇತ್ತೀಚೆಗೆ ಜನರು ಆಸಕ್ತಿ ತೋರಿಸದಿರುವುದರಿಂದ, ಸರಳ ವಿವಾಹದ ಕುರಿತು ಪ್ರಚಾರ ನೀಡಬೇಕು ಹಾಗೂ ವಿಧವಾ ಪುನರ್ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಇರುವ ಕಾರಣ ಸರ್ಕಾರದಿಂದ ಕಲಾ ತಂಡಗಳ ಮುಖಾಂತರ ಬೀದಿ ನಾಟಕಗಳನ್ನು ಮಾಡಿಸುವ ಮೂಲಕ ದೌರ್ಜನ್ಯ ತಡೆ ಕಾಯ್ದೆ, 1990ರ ಆಕ್ಟ್ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಯುವಕರನ್ನು ಮದುವೆಯಾದರೆ ರೂ. 2.5 ಲಕ್ಷ ಹಾಗೂ ಪರಿಶಿಷ್ಟ ಜಾತಿಯ ಯುವತಿಯನ್ನು ಮದುವೆಯಾದರೆ ರೂ. 3 ಲಕ್ಷ ಗಳ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮಶೀಲತೆ ಯೋಜನೆಯಡಿ ಶೇ. 50 ರಷ್ಟು ಸಹಾಯಧನವಿದ್ದು, ಇನ್ನುಳಿದ ಶೇ. 50 ಅನ್ನು ಬ್ಯಾಂಕುಗಳು ನೀಡಲಿವೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ರಾಜ್ಯ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ತಿಳಿಸಿದರು. ಅಲೆಮಾರಿ/ಅರೆ ಅಲೆಮಾರಿಗಳು, ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸುವ ಕೆಲಸವಾಗಬೇಕು ಎಂದರಲ್ಲದೇ ತ್ವರಿತವಾಗಿ ನಾಲ್ಕು ತಾಲ್ಲೂಕುಗಳಲ್ಲಿ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಗಾರಗಳನ್ನು ನಡೆಸಬೇಕು ಎಂದು ಸೂಚಿಸಿದರು. ಪರಿಶಿಷ್ಟ ಜಾತಿಯ ಅಂಗವಿಕರಿಗೆ ಆಧಾರ ಯೋಜನೆಯಡಿ ರೂ. 50,000 ಸಹಾಯಧನ ನಿಗದಿ ಪಡಿಸಿದ್ದು, ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ರೂ. 50,000 ಸಹಾಯಧನ, 50,000 ಲೋನ್ ಹಾಗೂ ಅಂಗವಿಕಲರನ್ನು ವಿವಾಹವಾದವರಿಗೆ ರೂ.50,000 ಗಳ ಪ್ರೋತ್ಸಾಹಧನ ಇದರೊಂದಿಗೆ ಟಾಕಿಂಗ್ ಲ್ಯಾಪ್‌ಟಾಪ್ ಸಹ ನೀಡಲಾಗುತ್ತಿದೆ ಎಂದರು.
ಗ್ರಾಮೀಣ ಕುಶಲಕರ್ಮಿಗಳಿಗೆ ರೂ. 5,000 ಗಳ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರಲ್ಲದೆ, ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿನ ಶಾಲೆಗಳು, ಕಾಲೇಜುಗಳು, ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಕುರಿತ ಜಾಗೃತಿ ಮೂಡಿಸಲು ಗೋಡೆ ಬರಹಗಳು, ಬೀದಿ ನಾಟಕಗಳು ಮಾಡಿಸಬೇಕು ಹಾಗೂ ಕೆಳ ಹಂತದಿಂದಲೇ ಸಮಸ್ಯೆಗಳ ಬಗ್ಗೆ ತಿಳಿದು ಪರಿಹಾರ ಸೂಚಿಸುವುದು ಅಧಿಕಾರಿಗಳ ಕರ್ತವ್ಯವಾಗಬೇಕು ಎಂದು ಸಲಹೆ ನೀಡಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್. ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಭವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್.ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಅಂಗವಿಕಲರ ಕಲ್ಯಾಣಧಿಕಾರಿ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment