ರಾಜ್ಯ ಸುದ್ದಿಗಳು
ದೇವನಹಳ್ಳಿ
ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನವಾದ ಮಾತಾಡ್‌ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಮೂಹಿಕ ಕನ್ನಡ ಗೀತೆಗಳ ಗಾಯನದ ಮೂಲಕ ಚಾಲನೆ ನೀಡಲಾಯಿತು.75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮದಲ್ಲಿ ದೇವನಹಳ್ಳಿ ಪಟ್ಟಣದ ವಿವಿಧ ಸರಕಾರಿ ಮತ್ತು ಖಾಸಗಿ ಶಾಲಾ ಮಕ್ಕಳು ಪಾಲ್ಗೋಂಡಿದ್ದರು. ಸಾಮೂಹಿಕ ಕನ್ನಡ ಗೀತೆಗಳಲ್ಲಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ.ಕೆ.ಎಸ್.ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ, ಹಂಸಲೇಖ ಅವರ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಸಾಮೂಹಿಕವಾಗಿ ವೇದಿಕೆಯ ಮೇಲಿನ ಗಣ್ಯರು ಹಾಗೂ ಮಕ್ಕಳು ಹಾಡಿದರು.
ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ಕನ್ನಡ ನಾಡು ನುಡಿಯ ಉತ್ಸವ ತೇರನ್ನು ಪ್ರತಿಯೊಬ್ಬರು ಎಳೆಯಬೇಕು. ಕನ್ನಡವನ್ನೇ ಮಾತನಾಡಬೇಕು. ಆಂಗ್ಲ ಭಾಷೆಯನ್ನು ಹೆಚ್ಚಾಗಿ ಬಳಸಬಾರದು. ಕನ್ನಡವೇ ನಮ್ಮ ಮಾತೃಭಾಷೆಯಾಗಿದೆ. ತಮಿಳುನಾಡಿನಲ್ಲಿ ತಮಿಳು, ಆಂಧ್ರದಲ್ಲಿ ತೆಲಗು ಹಾಗೆ ಕರ್ನಾಟಕದಲ್ಲಿ ಕನ್ನಡವೇ ಸರ್ವಭೌಮವಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ, ಪುರಸಭಾಧ್ಯಕ್ಷೆ ರೇಖಾವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪಲತಾ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕನ್ನಡ ಗೀತೆಗಳನ್ನು ಹಾಡುವುದರ ಮೂಲಕ ವೇದಿಕೆಗೆ ಮೆರಗು ತಂದುಕೊಟ್ಟರು.
ಈ ವೇಳೆಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ನಾಗೇಶ್, ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ವಾರ್ತಾ ಇಲಾಖೆಯ ಉಪನಿರ್ದೇಶಕ ಮಹೇಶ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೋಂಡಿದ್ದರು.
Be the first to comment