ರಾಜ್ಯ ಸುದ್ದಿಗಳು
ಮಂಗಳೂರು
ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಕಿಡಿಗೇಡಿಗಳು ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಇಂದು ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಆಗ್ರಹ:ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.ಈ ವಿಚಾರದ ಕುರಿತು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ಜರಗಿಸಲಾಗುತ್ತದೆ. ಶಾಂತಿಯುತವಾಗಿರುವ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.ಪ್ರಶಾಂತವಾಗಿರುವ ಕರಾವಳಿಯಲ್ಲಿ ಕೋಮುಗಲಭೆ ಎಬ್ಬಿಸಲು ಪ್ರಯತ್ನಿಸಿದರೆ ಅದನ್ನು ಕಂಡು ಸುಮ್ಮನೆ ಇರಲಾಗದು. ಕಳೆದ 4 ವರ್ಷಗಳಲ್ಲಿ ಕೋಮುಗಲಭೆಗಳು ನಡೆದಿಲ್ಲ ಮುಂದೆಯೂ ಕೂಡ ಅದಕ್ಕೆ ಆಸ್ಪದ ನೀಡುವುದಿಲ್ಲ ಎಂದು ಹೇಳಿದ್ದಾರೆ.
Be the first to comment