ಬೆಂಗಳೂರು : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಯುವ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿಜೆಪಿ ಯುವ ಮೋರ್ಚಾ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ,ಹಾಲಿ ಆಳಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಾಶಂಕರ ಪಾಟೀಲ್ ಅವರನ್ನು ನೇಮಕ ಮಾಡಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರು ಅಧಿಕೃತ ಆದೇಶ ನೀಡಿದರು.
ಕಳೆದ ೨೦ ವರ್ಷಗಳಿಂದ ಸಾಮಾಜಿಕ ಹೋರಾಟ,ಕನ್ನಡಪರ ಹೋರಾಟಗಳ ಮೂಲಕ ಸಾರ್ವಜನಿಕ ಜೀವನದಲ್ಲಿರುವ ಭೀಮಾಶಂಕರ ಪಾಟೀಲ್ ಅವರು ಕರ್ನಾಟಕ ನವನಿರ್ಮಾಣ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹೌದು.ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ ಇವರು,ಬೆಳಗಾವಿ ಗ್ರಾಮೀಣ,ಚಿಕ್ಕೋಡಿ ಜಿಲ್ಲೆಗಳ ಪ್ರಭಾರಿಗಳಾಗಿ,ಗೋವಾ ಚುನಾವಣಾ ಉಸ್ತುವಾರಿಗಳಾಗಿ ಕೆಲಸ ಮಾಡಿದ್ದಾರೆ.ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿರುವ ಭೀಮಾಶಂಕರ ಪಾಟೀಲ್ ಅವರು ಆಳಂದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿ ಕೆಲಸ ಮಾಡುತ್ತಲಿದ್ದಾರೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾದರು.
Be the first to comment