ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಆಯೋಜನೆಗೆ ಸಿದ್ಧತೆಗೆ ಸಚಿವರ ತಂಡ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್‌ 29-
ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.
ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*