ಬಾಗಲಕೋಟೆ:ಸಮಾಜ ಕಲ್ಯಾಣ ಇಲಾಖೆಯಡಿ ಪ್ರಸಕ್ತ ಸಾಲಿನ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸೈರಾಬಾನು ನಧಾಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್, ಜುಲೈ-2020ರ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 7 ಸಾವಿರ ರೂ., ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ ರೂ. ನೀಡಲಾಗುತ್ತಿದ್ದು, ಪ್ರೋತ್ಸಾಹಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿರುವದಿಲ್ಲ.
ಆಯವ್ಯಯ ಘೋಷಣೆಯಂತೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವದಿಲ್ಲ. ಅಂತಹ ವಿದ್ಯಾರ್ಥಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಮೆಟ್ರಿಕ್ ನಂತರದ ದ್ವಿತೀಯ ಪಿಯುಸಿ, 3 ವರ್ಷಗಳ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20 ಸಾವಿರ ರೂ., ಪದವಿಗೆ 25 ಸಾವಿರ ರೂ., ಎಂ.ಎ, ಎಂ.ಎಸ್ಸಿ, ಎಂ.ಕಾಮ್, ಎಂ.ಸಿ.ಎ ವಿದ್ಯಾರ್ಥಿಗಳಿಗೆ 30 ಸಾವಿರ ರೂ., ಅಗ್ರಿಕಲ್ಚರ, ಇಂಜಿನೀಯರಿಂಗ್, ಮೆಡಿಸಿನ್, ವೆಟರ್‍ನರಿ ವಿದ್ಯಾರ್ಥಿಗಳಿಗೆ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ www.sw.kar.nic.in ಮೂಲಕ ನವೆಂಬರ 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಶ್ವವಿದ್ಯಾಲಯದ ಮಟ್ಟದಲ್ಲಿ ಸ್ನಾತಕೋತ್ತರ ಪದವಿಯಲ್ಲಿ 1 ರಿಂದ 5ನೇ ರ್ಯಾಂಕ್ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್ www.sw.kar.nic.in ಅಲ್ಲಿ ಅರ್ಜಿ ಅಪಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದಾಖಾತಿಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-221821ಗೆ ಸಂಪರ್ಕಿಸಬಹುದಾಗಿದೆ.
Be the first to comment